ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ : ಸುಪ್ರೀಂ ಕೊರ್ಟ್ನಿಂದ ಸರ್ಕಾರಕ್ಕೆ ನೊಟೀಸ್

ಬೆಂಗಳೂರು : ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಯ ವಿರುದ್ಧ ಕೋಕಾ ಕಾಯ್ದೆಯಡಿ ಆರೋಪ ಕೈಬಿಟ್ಟಿರುವುದನ್ನು ಪ್ರಶ್ನಿಸಿ ಗೌರಿ ಸಹೋದರಿ ಕವಿತಾ ಲಂಕೇಶ್ ಸುಪ್ರೀಂಕೋರ್ಟ್ ಮೊರೆ ಹೋಗಿದ್ದು ಈ ಕುರಿತಂತೆ ನ್ಯಾಯಾಲಯ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ.
ಆರೋಪಿ ಮೋಹನ್ ನಾಯಕ್ ವಿರುದ್ಧ ಕೋಕಾ ಕಾಯ್ದೆಯಡಿ ಆರೋಪಗಳನ್ನು ಹೈಕೋರ್ಟ್ ರದ್ದುಪಡಿಸಿದ ನಂತರ ಆತ ಕಳೆದ ಕೆಲ ತಿಂಗಳಲ್ಲಿ ಜಾಮೀನಿಗಾಗಿ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದಾನೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. ಹೈಕೋರ್ಟ್ನಲ್ಲಿ ಜಾಮೀನು ಅರ್ಜಿ ವಿಚಾರಣೆ ಪೂರ್ಣಗೊಂಡಿದ್ದು ಆದೇಶ ನೀಡುವುದು ಬಾಕಿ ಇದೆ ಎಂದು ಮನವಿಯುಲ್ಲಿ ವಿವರಿಸಲಾಗಿದೆ.
ನ್ಯಾಯಮೂರ್ತಿಗಳಾದ ಎ ಎಂ ಖಾನ್ವಿಲ್ಕರ್, ದಿನೇಶ್ ಮಹೇಶ್ವರಿ ಹಾಗೂ ಅನಿರುದ್ಧ ಬೋಸ್ ಅವರ ಪೀಠ ಈ ಸಂಬಂಧ ಕರ್ನಾಟಕ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದ್ದು ಮುಂದಿನ ವಿಚಾರಣೆಗಾಗಿ ಜುಲೈ 15ಕ್ಕೆ ಪ್ರಕರಣವನ್ನು ನಿಗದಿಪಡಿಸಿದೆ.
ವಕೀಲೆ ಅಪರ್ಣಾ ಭಟ್ ಅವರ ಸಹಕಾರದೊಂದಿಗೆ ಹಿರಿಯ ನ್ಯಾಯವಾದಿ ಹುಜೇಫಾ ಅಹ್ಮದಿ ಅವರು ಅರ್ಜಿದಾರರನ್ನು ಪ್ರತಿನಿಧಿಸಿದರು.