ಜಮ್ಮು ಮತ್ತು ಕಾಶ್ಮೀರದ ಪ್ರಮುಖ ನಾಯಕರ ಜೊತೆ ಇಂದು ಪ್ರಧಾನಿ ಮೋದಿ ಸಭೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಜಮ್ಮು ಮತ್ತು ಕಾಶ್ಮೀರದ ಬಗ್ಗೆ ಸರ್ವಪಕ್ಷ ಸಭೆ ನಡೆಸಲಿದ್ದಾರೆ. 370 ನೇ ವಿಧಿಯನ್ನು ರದ್ದುಪಡಿಸಿದ ನಂತರ ಕೇಂದ್ರ ಮತ್ತು ಕಣಿವೆಯ ನಾಯಕರ ನಡುವಿನ ಮೊದಲ ಪ್ರಮುಖ ಸಭೆ ಇದಾಗಿದೆ. ಈ ಸಂದರ್ಭದಲ್ಲಿ ಭಯೋತ್ಪಾದಕ ಘಟನೆಗಳು ನಡೆಯುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ಜಮ್ಮು ಮತ್ತು ಕಾಶ್ಮೀರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಪ್ರಧಾನಿ ಮೋದಿ ಅವರು ಇಂದು ಜಮ್ಮು ಮತ್ತು ಕಾಶ್ಮೀರ ಕುರಿತು ಕರೆದ ಸರ್ವಪಕ್ಷ ಸಭೆಗೆ ಜಮ್ಮು ಮತ್ತು ಕಾಶ್ಮೀರದ 4 ಮಾಜಿ ಮುಖ್ಯಮಂತ್ರಿಗಳು ಸೇರಿದಂತೆ 14 ನಾಯಕರು ಭಾಗವಹಿಸಲಿದ್ದಾರೆ. ಈ ಸಭೆಯಲ್ಲಿ ರಾಜ್ಯದ ರಾಜಕೀಯ ಪ್ರಕ್ರಿಯೆಯ ಬಗ್ಗೆ ಚರ್ಚೆ ನಡೆಸಬಹುದು ಎನ್ನಲಾಗಿದೆ.
ರಾಜ್ಯದಲ್ಲಿ 370 ನೇ ವಿಧಿಯನ್ನು ರದ್ದುಪಡಿಸಿದ ನಂತರ, ದೆಹಲಿಯಲ್ಲಿ ಮೊದಲ ಬಾರಿಗೆ ಇಂತಹ ಸಭೆಯನ್ನು ಕರೆಯಲಾಗಿದೆ. ಸಭೆ ಇಂದು ಮಧ್ಯಾಹ್ನ 3 ಗಂಟೆಗೆ ಪ್ರಾರಂಭವಾಗಲಿದೆ.
ಪಿಡಿಪಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಸೇರಿದಂತೆ ಒಟ್ಟು ಎಂಟು ಪಕ್ಷಗಳ 14 ಪ್ರಮುಖ ನಾಯಕರನ್ನು ಸಭೆಗೆ ಆಹ್ವಾನಿಸಲಾಗಿದೆ. ಇವರಲ್ಲಿ ನ್ಯಾಷನಲ್ ಕಾನ್ಫರೆನ್ಸ್ ನ ಫಾರೂಕ್ ಅಬ್ದುಲ್ಲಾ ಮತ್ತು ಒಮರ್ ಅಬ್ದುಲ್ಲಾ, ಕಾಂಗ್ರೆಸ್ ನ ಗುಲಾಮ್ ನಬಿ ಆಜಾದ್, ಪಿಡಿಪಿಯಿಂದ ಮೆಹಬೂಬಾ ಮುಫ್ತಿ, ಬಿಜೆಪಿಯಿಂದ ನಿರ್ಮಲ್ ಸಿಂಗ್, ಕವಿಂದರ್ ಗುಪ್ತಾ, ಮುಜಾಫರ್ ಸೇರಿದಂತೆ, ಪೀಪಲ್ಸ್ ಕಾನ್ಫರೆನ್ಸ್ನ ಬೇಗ್ ಮತ್ತು ಸಜ್ಜಾದ್ ಲೋನ್, ಸಿಪಿಐಎಂನ ಮೊಹಮ್ಮದ್ ಯೂಸುಫ್ ತಾರಿಗಾಮಿ ಮತ್ತು ಜೆಕೆ ಅಪನಿ ಪಕ್ಷದ ಅಲ್ತಾಫ್ ಬುಖಾರಿ. ಸೇರಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ರಾಜಕೀಯ ಪ್ರಕ್ರಿಯೆಯನ್ನು ಪ್ರಾರಂಭಿಸುವ ಬಗ್ಗೆಯೂ ಈ ಸಭೆಯಲ್ಲಿ ಚರ್ಚೆ ನಡೆಸಬಹುದು. ಬಿಜೆಪಿ ಮತ್ತು ಪಿಡಿಪಿ ಮೈತ್ರಿ ಮುರಿದ ನಂತರ 2018 ರಿಂದ ಅಲ್ಲಿ ರಾಷ್ಟ್ರಪತಿ ಆಡಳಿತ ಹೇರಲಾಗಿದೆ.
ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಪುನಃಸ್ಥಾಪಿಸಬೇಕೆಂದು ಒತ್ತಾಯಿಸುವ, ಫಾರೂಕ್ ಅಬ್ದುಲ್ಲಾ ನೇತೃತ್ವದ ಗುಪ್ಕರ್ ಗುಂಪು ಕೂಡ ಈ ಸಭೆಯಲ್ಲಿ ಭಾಗವಹಿಸಲಿದೆ.
ಸಭೆಯಲ್ಲಿ ಜಮ್ಮು ಕಾಶ್ಮೀರದ ವಿಶೇಷ ಸ್ಥಾನವನ್ನು ಮರು ಸ್ಥಾಪಿಸಲು ಒತ್ತಾಯಿಸುವುದಾಗಿ ಪಿಡಿಪಿ ನಾಯಕಿ ಮೆಹಬೂಬಾ ಮುಪ್ತಿ ಹೇಳಿದ್ದಾರೆ.
ಇಂದು ನಡೆಯುವ ಸಭೆಯು ಅಂತರರಾಷ್ಟ್ರೀಯ ಮಟ್ಟದ ದೃಷ್ಟಿಯಿಂದಲೂ ಮಹತ್ವ ಪಡೆಯಲಿದೆ ಎನ್ನಲಾಗಿದೆ.
ಕಳೆದ ಶುಕ್ರವಾರ ಗೃಹ ಸಚಿವ ಅಮಿತ್ ಶಾ ಅವರು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಮತ್ತು ಉನ್ನತ ಭದ್ರತಾ ಮತ್ತು ಗುಪ್ತಚರ ಅಧಿಕಾರಿಗಳನ್ನು ಭೇಟಿಯಾಗಿದ್ದರು.
ಗೃಹ ಸಚಿವಾಲಯದ ಅಧಿಕಾರಿಗಳ ಪ್ರಕಾರ – ಕೋವಿಡ್ ಸಾಂಕ್ರಾಮಿಕದ ನಂತರ, ಭಯೋತ್ಪಾದಕ ಚಟುವಟಿಕೆಗಳು ಕಡಿಮೆಯಾಗಿರುವ ಮಧ್ಯೆ ರಾಜಕೀಯ ಪ್ರಕ್ರಿಯೆಯನ್ನು ಪ್ರಾರಂಭಿಸಲು ಈಗ ಇದು ಸರಿಯಾದ ಸಮಯ ಎಂದಿದೆ.
ಈ ಹಿಂದೆ 2019 ರ ಲೋಕಸಭಾ ಚುನಾವಣೆಯೊಂದಿಗೆ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ ಎಂದು ನಿರೀಕ್ಷಿಸಲಾಗಿತ್ತು, ಆದರೆ ಆಡಳಿತವು ಭದ್ರತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ ನಂತರ ಚುನಾವಣಾ ಆಯೋಗ ಅದನ್ನು ತಿರಸ್ಕರಿಸಿತು.
2020ರ ಡಿಸೆಂಬರ್ನಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆದಿದ್ದು, ಇದರಲ್ಲಿ ಗುಪ್ಕರ್ ಮೈತ್ರಿ 100 ಸ್ಥಾನಗಳನ್ನು ಗೆದ್ದಿದೆ ಮತ್ತು ಬಿಜೆಪಿ 74 ಸ್ಥಾನಗಳನ್ನು ಹೊಂದಿರುವ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು.