ಮೂರನೇ ಅಲೆ ನಿಯಂತ್ರಣಕ್ಕೆ ಸಕಲ ಸಿದ್ಧತೆ: ಕೆ ಸುಧಾಕರ್

ಚಿಕ್ಕಮಗಳೂರು: ಕೋವಿಡ್ ಮೂರನೇ ಅಲೆ ಬರುತ್ತೋ ಇಲ್ಲವೋ ಗೊತ್ತಿಲ್ಲ. ಏನೇ ಬಂದರೂ ಅದನ್ನು ನಿಯಂತ್ರಿಸಲು ರಾಜ್ಯದಲ್ಲಿ ಸಕಲ ಸಿದ್ಧತೆ ನಡೆದಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದರು.
ಬೆಳ್ತಂಗಡಿ ತಾಲೂಕಿನ ಚಾರ್ಮಾಡಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಹೊಸ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು. ವಿವಿಧ ರೂಪಾಂತರಿ ವೈರಾಣುಗಳ ಪರೀಕ್ಷೆಗೆ ಅತ್ಯಾಧುನಿಕ ಪ್ರಯೋಗಾಲಯವನ್ನು ಮಂಗಳೂರಲ್ಲಿ ಸ್ಥಾಪಿಸಲಾಗುವುದು. ಇದು ಸಂಶೋಧನೆಗೆ ಸಹಾಯಕವಾಗುತ್ತದೆ ಎಂದರು. ದ.ಕ ಜಿಲ್ಲೆಯಲ್ಲಿ ಈಗಾಗಲೇ ಶೇ.80ರಷ್ಟು ವೈದ್ಯರ ನೇಮಕಾತಿ ನಡೆದಿದೆ. ಗುತ್ತಿಗೆ ಆಧಾರದಲ್ಲೂ ವೈದ್ಯ ಸಿಬ್ಬಂದಿಗಳನ್ನು ನೇಮಕಗೊಳಿಸಲಾಗಿದೆ ಎಂದರು.
ಗ್ರಾಮೀಣ ಭಾಗದಲ್ಲಿ ಆರೋಗ್ಯ ವ್ಯವಸ್ಥೆ ಸುಧಾರಣೆ, ಹೊಸ ಮಾದರಿಯ ಚಿಕಿತ್ಸಾ ಕೇಂದ್ರಗಳನ್ನು ಆರಂಭಿಸಲಾಗುತ್ತಿದೆ. ಚಾರ್ಮಾಡಿಯಲ್ಲಿ 1.37ಕೋಟಿ ರೂ. ವೆಚ್ಚದಲ್ಲಿ ಆರೋಗ್ಯ ಕೇಂದ್ರದ ನೂತನ ಕಟ್ಟಡ ನಿರ್ಮಿಸಲಾಗಿದೆ ಎಂದರು. ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಹರೀಶ್ ಪೂಂಜ, ಜಿಪಂ ಸಿಇಒ ಡಾ.ಕುಮಾರ್, ಜಿಲ್ಲಾ ಆರೋಗ್ಯಾಧಿಕಾರಿ ಕಿಶೋರ್ ಕುಮಾರ್, ಗ್ರಾಪಂ ಅಧ್ಯಕ್ಷ ಪ್ರಸಾದ್ ಇದ್ದರು.