ಕೋವಿಡ್ ಸೋಂಕು ಪ್ರಮಾಣ ಗಣನೀಯ ಇಳಿಕೆ: ಸಂಸದ ಬಚ್ಚೇಗೌಡ

ದೇವನಹಳ್ಳಿ : ರಾಜ್ಯಾದ್ಯಂತ ಲಾಕ್ಡೌನ್ ಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸದಸ್ಯರಾದ ಬಿ.ಎನ್. ಬಚ್ಚೇಗೌಡ ತಿಳಿಸಿದರು.
ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್ ಪರಿಕರಗಳನ್ನು ಜಿಲ್ಲಾಡಳಿತಕ್ಕೆ ಹಸ್ತಾಂತರಿಸಿ ಅವರು ಮಾತನಾಡಿ ಕೋವಿಡ್ ಸೋಂಕಿನ ಪ್ರಮಾಣ ಇಳಿಕೆ ಆಗುತ್ತಿರುವ ಹಿನ್ನೆಲೆ, ಹಂತ ಹಂತವಾಗಿ ಲಾಕ್ಡೌನ್ ತೆರವುಗೊಳಿಸಬೇಕು ಎಂದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿರುವ ಕೋವಿಡ್ ಸ್ಥಿತಿಯ ಬಗ್ಗೆ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆಯಲಾಗಿದ್ದು, ಜಿಲ್ಲೆಯಲ್ಲಿ ಆಕ್ಸಿಜನ್, ಬೆಡ್ ಹಾಗೂ ಲಸಿಕೆಯ ಯಾವುದೇ ಸಮಸ್ಯೆ ಇಲ್ಲ ಎಂದರು.
ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ವೈದ್ಯರು, ಸಿಬ್ಬಂದಿಗಳು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಕರೋನಾ ವಾರಿಯರ್ಸ್ ಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ ಹಾಗೂ ಮಾಧ್ಯಮಗಳು ಸಹ ಜನರಲ್ಲಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ ಎಂದು ತಿಳಿಸಿದರು.
ಜಿಲ್ಲಾಡಳಿತದಿಂದ ಇದುವರೆಗೂ 20 ಸಾವಿರ ಮೆಡಿಕಲ್ ಕಿಟ್ ವಿತರಣೆ ಮಾಡಲಾಗಿದೆ ಎಂದರು. ಅಲ್ಲದೆ, ಪ್ರತೀ ತಾಲ್ಲೂಕಿನಲ್ಲಿ 6 ರಂತೆ ಒಟ್ಟು 24 ಆಂಬ್ಯುಲೆನ್ಸ್ ಗಳು ಕಾರ್ಯನಿರ್ವಹಿಸುತ್ತಿವೆ ಎಂದರು.
ಕೋವಿಡ್ ಮೂರನೇ ಅಲೆ ಮಕ್ಕಳ ಮೇಲೆ ಹೆಚ್ಚಿನ ಪರಿಣಾಮ ಬೀರಲಿದೆ ಎಂದು ಈಗಾಗಲೇ ವೈದ್ಯರು ತಿಳಿಸಿದ ಹಿನ್ನೆಲೆ, 1 ರಿಂದ 6 ವರ್ಷ ಹಾಗೂ 6 ರಿಂದ 18 ವರ್ಷದ ಮಕ್ಕಳನ್ನು ಪ್ರತ್ಯೇಕವಾಗಿ ಆರೈಕೆ ಮಾಡುವಂತೆ ಸೂಚಿಸಲಾಗಿದ್ದು, ಅದರಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದೊಂದಿಗೆ ಮಕ್ಕಳಲ್ಲಿ ಕೋವಿಡ್ ಹರಡುವಿಕೆಯನ್ನು ತಡೆಯಲು ಎಲ್ಲರೂ ಮುಂದಾಗಬೇಕು ಹಾಗೂ ಮಕ್ಕಳಲ್ಲಿ ಅಪೌಷ್ಟಿಕತೆ ಹೆಚ್ಚಾಗದಂತೆ ಕ್ರಮ ಕೈಗೊಳ್ಳಬೇಕು ಎಂದರು.
ಈ ವೇಳೆ ಅಪರ ಜಿಲ್ಲಾಧಿಕಾರಿ ಡಾ. ಜಗದೀಶ.ಕೆ.ನಾಯಕ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಪ್ಪೇಸ್ವಾಮಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.