ದ್ವಿತೀಯ ಪಿಯುಸಿ ಪರೀಕ್ಷೆ ರದ್ದು; ಜುಲೈನಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲು ಸರ್ಕಾರ ನಿರ್ಧಾರ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ನಡೆಸದಿರಲು ಸರ್ಕಾರ ನಿರ್ಧರಿಸಿದೆ. ವಿದ್ಯಾರ್ಥಿಗಳು ಪ್ರಥಮ ಪಿಯುಸಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಹಲವು ಮಾನದಂಡಗಳನ್ನು ನಿಗದಿಪಡಿಸಿ ಅದರ ಆಧಾರದ ಮೇಲೆ ಶ್ರೇಣಿ ವರ್ಗೀಕರಣ ಮಾಡಲಾಗುವುದು. ದ್ವಿತೀಯ ಪಿಯುಸಿ ಎಲ್ಲ ವಿದ್ಯಾರ್ಥಿಗಳು ಉತ್ತೀರ್ಣ ಎಂದು ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ದ್ವಿತೀಯ ಪಿಯು ವ್ಯಾಸಂಗ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮೇಲ್ದರ್ಜೆಗೆ ಏರಿಸಲಾಗುತ್ತದೆ ಹಾಗೂ ಅವರ ಪ್ರಥಮ ಪಿಯು ಪರೀಕ್ಷೆಗಳ ಫಲಿತಾಂಶದ ಆಧಾರದಲ್ಲಿ ಅವರಿಗೆ ಗ್ರೇಡಿಂಗ್ ನೀಡಲಾಗುವುದು ಎಂದು ತಿಳಿಸಿದ್ದಾರೆ. ಯಾವುದಾದರೂ ವಿದ್ಯಾರ್ಥಿಗಳಿಗೆ ಗ್ರೇಡಿಂಗ್ ವ್ಯವಸ್ಥೆಯಲ್ಲಿ ಅಸಮಾಧಾನವಿದ್ದರೆ, ಅಂತಹವರಿಗೆ ಲಾಕ್ ಡೌನ್ ಮುಗಿದ ಬಳಿಕ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಆದರೆ, ಎರಡನೇ ಅಲೆ ನಡುವೆಯೂ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವುದಕ್ಕೆ ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಹೇಳಿದ್ದಾರೆ. ಜುಲೈ ತಿಂಗಳ ಮೂರನೇ ವಾರದಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗುತ್ತದೆ. ಈ ಬಾರಿ 8.75 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಎರಡು ವಿಭಾಗಗಳಾಗಿ ಪರೀಕ್ಷೆ ನಡೆಸುವುದಕ್ಕೆ ಸರ್ಕಾರ ತೀರ್ಮಾನಿಸಿದೆ. ಒಂದನೇ ಭಾಗದಲ್ಲಿ ವಿಜ್ಞಾನ, ಗಣಿತ, ಮತ್ತು ಸಮಾಜ ವಿಜ್ಞಾನ ವಿಷಯದ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಈ ಪ್ರಶ್ನೆ ಪತ್ರಿಕೆಯಿಂದ ವಿದ್ಯಾರ್ಥಿಗಳು ಮುಂದಿನ ಹಂತದಲ್ಲಿ ಯಾವ ವಿಷಯವನ್ನು ಆಯ್ಕೆ ಮಾಡಿಕೊಳ್ಳುವುದು ಸೂಕ್ತ ಎಂಬ ಬಗ್ಗೆ ನಿರ್ಧರಿಸುವುದಕ್ಕೆ ಸುಲಭವಾಗಿರುತ್ತದೆ. ಎರಡನೇ ವಿಭಾಗದಲ್ಲಿ ಐಚ್ಛಿಕ ವಿಷಯದ ಪ್ರಶ್ನೆ ಪತ್ರಿಕೆಯಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವುದರ ಹಿಂದೆ ಯಾರನ್ನೂ ಉನುತ್ತೀರ್ಣಗೊಳಿಸುವ ಉದ್ದೇಶವಿಲ್ಲ. ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ವಿಷಯಗಳನ್ನು ಕ್ರೋಢೀಕರಿಸಿದ ಸರಳ ಮತ್ತು ನೇರ ಪ್ರಶ್ನೆಗಳನ್ನು ಪ್ರಶ್ನೆ ಪತ್ರಿಕೆ ಒಳಗೊಂಡಿರುತ್ತದೆ. ಬಹು ಆಯ್ಕೆ ಮಾದರಿಯಲ್ಲಿ ಪ್ರಶ್ನೆ ಪತ್ರಿಕೆಯನ್ನು ಸಿದ್ಧಪಡಿಸಲಾಗಿರುತ್ತದೆ. ಒಂದು ಪ್ರಶ್ನೆಗೆ ನಾಲ್ಕು ಉತ್ತರಗಳನ್ನು ಕೆಳಗೆ ನೀಡಲಾಗಿರುತ್ತದೆ. ಈ ಪೈಕಿ ಒಂದು ಉತ್ತರವನ್ನು ವಿದ್ಯಾರ್ಥಿಗಳು ಆಯ್ಕೆ ಮಾಡಬಹುದಾಗಿದೆ.
ತಮ್ಮೂರಿಗೆ ಹತ್ತಿರದಲ್ಲಿ ಇರುವ ಪರೀಕ್ಷಾ ಕೇಂದ್ರದಲ್ಲೇ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲು ಅವಕಾಶ ಕಲ್ಪಿಸಿಕೊಡಲಾಗುವುದು ಎಂದೂ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.