ಸಿಎಂ ತವರು ಶಿಗ್ಗಾವಿಯಲ್ಲೇ ಬಿಜೆಪಿಗೆ ಆಘಾತ; ಬೊಮ್ಮಾಯಿ ಆಪ್ತ ಸೇರಿ ಹಲವರು ಕಾಂಗ್ರೆಸ್ ಸೇರ್ಪಡೆ, 'ಬಿಜೆಪಿ ಶೋಚನೀಯ ಸ್ಥಿತಿಗೆ ಸಾಕ್ಷಿ'

ಸಿಎಂ ತವರು ಶಿಗ್ಗಾವಿಯಲ್ಲೇ ಬಿಜೆಪಿಗೆ ಆಘಾತ; ಬೊಮ್ಮಾಯಿ ಆಪ್ತ ಸೇರಿ ಹಲವರು ಕಾಂಗ್ರೆಸ್ ಸೇರ್ಪಡೆ, 'ಬಿಜೆಪಿ ಶೋಚನೀಯ ಸ್ಥಿತಿಗೆ ಸಾಕ್ಷಿ'

ರಾಜ್ಯ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಬಿಜೆಪಿಗೆ ಸಿಎಂ ತವರು ಶಿಗ್ಗಾವಿಯಲ್ಲೇ ಆಘಾತ ಎದುರಾಗಿದ್ದು, ಬಸವರಾಜ ಬೊಮ್ಮಾಯಿ ಆಪ್ತರೆಂದೇ ಹೇಳಲಾಗುತ್ತಿದ್ದ ಶಿಗ್ಗಾಂವಿ ಕ್ಷೇತ್ರದ ಮಾಜಿ ಸಂಸದ ಮಂಜುನಾಥ್‌ ಕುನ್ನೂರು ಸೇರಿದಂತೆ ಹಲವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಬಿಜೆಪಿಗೆ ಸಿಎಂ ತವರು ಶಿಗ್ಗಾವಿಯಲ್ಲೇ ಆಘಾತ ಎದುರಾಗಿದ್ದು, ಬಸವರಾಜ ಬೊಮ್ಮಾಯಿ ಆಪ್ತರೆಂದೇ ಹೇಳಲಾಗುತ್ತಿದ್ದ ಶಿಗ್ಗಾಂವಿ ಕ್ಷೇತ್ರದ ಮಾಜಿ ಸಂಸದ ಮಂಜುನಾಥ್‌ ಕುನ್ನೂರು ಸೇರಿದಂತೆ ಹಲವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಮಂಜುನಾಥ್‌ ಕುನ್ನೂರು ಮತ್ತು ಅವರ ಪುತ್ರ ರಾಜು ಕುನ್ನೂರು, ಚಿಂತಾಮಣಿಯ ನಾಯಕರಾದ ಎಂ.ಸಿ. ಸುಧಾಕರ್ ಹಾಗೂ ಕೆ.ಆರ್ ಪೇಟೆ ಕ್ಷೇತ್ರದ ಜೆಡಿಎಸ್​ ನಾಯಕ ಶ್ರೀ ಬಿ.ಎಲ್ ದೇವರಾಜು ಅವರು ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್​ಗೆ ಸೇರ್ಪಡೆಯಾದರು.

ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಮ್ಮುಖದಲ್ಲಿ ಈ ಎಲ್ಲ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಮಾಜಿ ಸಚಿವರಾದ ಪ್ರಿಯಾಂಕ್ ಖರ್ಗೆ, ರೆಹಮಾನ್ ಖಾನ್, ಚಲುವರಾಯಸ್ವಾಮಿ, ನರೇಂದ್ರಸ್ವಾಮಿ ಉಪಸ್ಥಿತರಿದ್ದರು.

ಬಿಜೆಪಿ ಶೋಚನೀಯ ಸ್ಥಿತಿಗೆ ಇದು ಸಾಕ್ಷಿ: ಡಿಕೆಶಿ
ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು, 'ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಲಗೈ ಭಂಟನಂತೆ ಇದ್ದ ಶಿಗ್ಗಾಂವ್ ಕ್ಷೇತ್ರದ ಬಿಜೆಪಿ ನಾಯಕ, ಮಾಜಿ ಸಂಸದ ಹಾಗೂ ಮಾಜಿ ಶಾಸಕ ಮಂಜುನಾಥ್ ಕುನ್ನೂರ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದು, ಬಿಜೆಪಿಯ ಶೋಚನೀಯ ಸ್ಥಿತಿಗೆ ಇದು ಸಾಕ್ಷಿ' ಎಂದು ವ್ಯಂಗ್ಯವಾಡಿದರು.