BREAKING NEWS:
ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದ ಸ್ಯಾಂಡಲ್ ವುಡ್ ಹಿರಿಯ ನಟಿ ಜಯಂತಿ (76) ಇಂದು ಬೆಂಗಳೂರಿನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಇಂದು ಮುಂಜಾನೆ ಬನಶಂಕರಿಯ ಸ್ವಗೃಹದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಅವರ ಕುಟುಂಬಸ್ಥರು ಅಭಿಪ್ರಾಯಪಟ್ಟಿದ್ದಾರೆ.
ನಟಿ ಜಯಂತಿ ಅವರು ಒಟ್ಟು ಆರು ಭಾಷೆಗಳಲ್ಲಿ 500 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ವರನಟ ಡಾ. ರಾಜ್ ಕುಮಾರ್ ಜೊತೆಗೆ ಸುಮಾರು 45 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದರು. ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಭಾಷೆಗಳಲ್ಲಿ ಜಯಂತಿ ನಟಿಸಿದ್ದರು. 1945, ಜನವರಿ 6ರಂದು ಬಳ್ಳಾರಿ ಜಿಲ್ಲೆಯಲ್ಲಿ ಜನಿಸಿದ ಜಯಂತಿ ಅವರ ಮೂಲ ಹೆಸರು ಕಮಲಾ ಕುಮಾರಿ ಆಗಿತ್ತು.
ಒಟ್ಟು ಆರು ಭಾಷೆಯ ಚಿತ್ರಗಳಲ್ಲಿ ಅಭಿನಯಿಸಿರುವ ಜಯಂತಿ ಕನ್ನಡದ 190 ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. 1965 'ಮಿಸ್ ಲೀಲಾವತಿ' ಚಿತ್ರದ ಅಭಿನಯಕ್ಕಾಗಿ ರಾಷ್ಟ್ರ ಪ್ರಶಸ್ತಿ ಬಂದಿದೆ.'ಎರಡು ಮುಖ'(1969),ಮನಸ್ಸಿನಂತೆ ಮಾಂಗಲ್ಯ'(1976),'ಧರ್ಮ ದಾರಿ ತಪ್ಪಿತು'(1981),ಮಸಣದ ಹೂವು (1985),'ಆನಂದ್ '(1989) ಚಿತ್ರಗಳ ಅಭಿನಯಕ್ಕಾಗಿ ಐದು ಬಾರಿ ರಾಜ್ಯ ಪ್ರಶಸ್ತಿ ಗಳಿಸಿದ್ದಾರೆ.
ಪ್ರಖ್ಯಾತ ಹಿರಿಯ ಕಲಾವಿದೆ, ಅಭಿನಯ ಶಾರದೆ ಜಯಂತಿ ಅವರ ನಿಧನದ ಸುದ್ದಿ ಅತೀವ ದುಃಖ ತಂದಿದೆ. ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರವಾಗಿದ್ದು, ಕನ್ನಡ ಕಲಾಲೋಕಕ್ಕೆ ತುಂಬಲಾರದ ನಷ್ಟವುಂಟಾಗಿದೆ. ದೇವರು ಅವರ ಆತ್ಮಕ್ಕೆ ಸದ್ಗತಿ ಕರುಣಿಸಲಿ, ಅವರ ಕುಟುಂಬ, ಅಪಾರ ಅಭಿಮಾನಿ ಬಳಗಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಂತಾಪವನ್ನು ಸೂಚಿಸಿದ್ದಾರೆ.