DISTRICT:
ದಾವಣಗೆರೆ: ಈ ತಿಂಗಳ ಕೊನೆಯ ವಾರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಜಗಳೂರು ತಾಲೂಕಿಗೆ ಆಗಮಿಸಲಿದ್ದಾರೆ. ಜಗಳೂರು ತಾಲ್ಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಲು ಇದೇ ಏಪ್ರಿಲ್ ತಿಂಗಳ ಕೊನೆಯ ವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಗಳೂರಿಗೆ ಆಗಮಿಸುವ ಹಿನ್ನೆಲೆಯಲ್ಲಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಇಲಾಖೆಗಳು ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ವಿವಿಧ ಇಲಾಖೆಗಳು ತಮ್ಮ ಇಲಾಖೆ ವತಿಯಿಂದ ನೀಡಲಾಗುವ ಯೋಜನೆ, ಕಾರ್ಯಕ್ರಮಗಳ ವಿವರಗಳನ್ನು ಒಳಗೊಂಡ ಸ್ಟಾಲ್ ಗಳನ್ನು ಕಾರ್ಯಕ್ರಮ ಜರುಗುವ ಆವರಣದಲ್ಲಿ ಹಾಕಬೇಕು ಎಂದು ಹೇಳಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸೇರಿದಂತೆ ವಿವಿಧ ಇಲಾಖೆಗಳ ಸಚಿವರು, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಕಾರ್ಯಕ್ರಮ ಬಹಳ ಅಚ್ಚುಕಟ್ಟಿನಿಂದ ಕೂಡಿರಬೇಕು ಅಂದು ಮುಖ್ಯಮಂತ್ರಿಗಳು ಜಗಳೂರು ತಾಲ್ಲೂಕಿನ ಸಮಗ್ರ ಅಭಿವೃದ್ದಿಗೆ, ಪ್ರಮುಖವಾಗಿ ಕರ್ನಾಟಕ ನೀರಾವರಿ ನಿಗಮದ ವತಿಯಿಂದ ಜಗಳೂರು ತಾಲ್ಲೂಕಿನ 57 ಕೆರೆಗಳನ್ನು ತುಂಬಿಸುವ 1255 ಕೋಟಿ ರೂ. ವೆಚ್ಚದ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ.
26 ಕೋಟಿ ರೂ. ವೆಚ್ಚದಲ್ಲಿ ಕೊಳಚೆ ನಿರ್ಮೂಲನಾ ಮಂಡಳಿಯ ನಿವೇಶನಗಳ ಅಭಿವೃದ್ದಿಗೆ ಶಂಕುಸ್ಥಾಪನೆ, 3 ಕೋಟಿ ರೂ. ವೆಚ್ಚದಲ್ಲಿ ನೂತನ ಪಟ್ಟಣ ಪಂಚಾಯಿತಿ ಕಟ್ಟಡದ ಲೋಕಾರ್ಪಣೆ, ಕೃಷಿ ಇಲಾಖೆಯ 5,340 ಹೆಕ್ಟೇರ್ ಭೂಮಿಗೆ ನೀರೊದಗಿಸುವ ಕೃಷಿ ಸಿಂಚಾಯಿ ಯೋಜನೆಯ ಜಲಾನಯನ ಅಭಿವೃದ್ದಿ ಕಾಮಗಾರಿ ಲೋಕಾರ್ಪಣೆ, 2 ಕೋಟಿ ರೂ. ವೆಚ್ಚದ ವಿ.ಐ.ಪಿ ಗೆಸ್ಟ್ ಹೌಸ್ ಲೋಕಾರ್ಪಣೆ, ಜಂಗಮ ತುಂಬಿಗೆರೆಯ 1.5 ಕೋಟಿ ರೂ. ವೆಚ್ಚದ ಚೆಕ್ ಡ್ಯಾಂ ಸೇರಿದಂತೆ ಹಲವಾರು ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.