DISTRICT:
ಹಾಸನ ; ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಗೆ ಪ್ರಾರಂಭಕ್ಕೆ ಕೇಂದ್ರ ಸರ್ಕಾರದ ಅನುಮತಿಗಾಗಿ ಕಾಯಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಹೇಳಿದ್ದಾರೆ.
ಜಿಲ್ಲೆಯ ಬೇಲೂರು ತಹಶೀಲ್ದಾರ್ ಕಚೇರಿ ಎದುರು ರಾಗಿ ಖರೀದಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತ ಮುಖಂಡರನ್ನು ಉದ್ದೇಶಿಸಿ ಮಾತನಾಡಿದ ಅವರು, ಈಗಾಗಲೇ ರಾಜ್ಯ ಸರ್ಕಾರ ಕೇಂದಕ್ಕೆ ಪತ್ರ ಬರೆದು ರಾಗಿ ಖರೀದಿಗೆ ಮನವಿ ಮಾಡಿದ್ದು, ನಿರಂತರ ಪ್ರಯತ್ನ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಸೋಮವಾರ ಮತ್ತೆ ವಿಧಾನಮಂಡಲದ ಅಧಿವೇಶನ ಆರಂಭವಾಗಲಿದ್ದು, ಇದಕ್ಕಿಂತ ಮುಂಚಿತವಾಗಿ ಸಿ.ಟಿ. ರವಿ ಅವರ ಜೊತೆಯಲ್ಲಿ ತೆರಳಿ ಮುಖ್ಯಮಂತ್ರಿ ಗಳೊಂದಿಗೆ ಮಾತನಾಡಿ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಸಚಿವ ಸಂಪುಟದಲ್ಲಿ ಈ ಬಗ್ಗೆ ಚರ್ಚೆ ನಡೆಸಿದಾಗ ಸಚಿವರಾದ ವಿ.ಸೋಮಣ್ಣ, ಜೆ.ಸಿ.ಮಾಧುಸ್ವಾಮಿ ಸೇರಿದಂತೆ ಅನೇಕ ಸಚಿವರು ಧ್ವನಿ ಗೂಡಿಸಿದ್ದಾರೆ. ಇದಕ್ಕೆ ಕೇಂದ್ರ ಸರ್ಕಾರದ ಒಪ್ಪಿಗೆ ಕೂಡ ಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದ್ದು, ಅನುಮತಿ ನಿರೀಕ್ಷೆಯಲ್ಲಿರುವುದಾಗಿ ತಿಳಿಸಿದರು.
ಹಳೇ ಮೈಸೂರು ಭಾಗದಲ್ಲಿ ರಾಗಿಬೆಳೆಗಾರರಿಗೆ ಅನ್ಯಾಯವಾಗುವುದನ್ನು ಮನಗಂಡು ಮೈಸೂರು ಭಾಗದಲ್ಲಿ ಮುಂದಿನ 9 ತಿಂಗಳಿಗೆ ಬೇಕಾಗುವ ಪಡಿತರ ಧಾನ್ಯದೊಂದಿಗೆ ರಾಗಿಯನ್ನು ನೀಡುವ ಕುರಿತು ಸಂಪುಟ ಸಭೆಯಲ್ಲಿ ಚರ್ಚೆಗಳು ನಡೆದಿವೆ. ಹಾಸನ, ಚಿಕ್ಕಮಗಳೂರು, ಮೈಸೂರು, ತುಮಕೂರು, ಕೋಲಾರ, ಚಿತ್ರದುರ್ಗ, ಮಂಡ್ಯ ಭಾಗದ ಎಲ್ಲ ರಾಗಿಬೆಳೆಗಾರರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಸೋಮವಾರ ಅಧಿವೇಶನ ಆರಂಭಕ್ಕೂ ಮುನ್ನ ಸಿಎಂ ಜೊತೆ ಚರ್ಚೆ ನಡೆಸಲಾಗುವುದು. ಅಲ್ಲಿಯವರೆಗೂ ಧರಣಿ ಕೈ ಬಿಡುವಂತೆ ಮನವಿ ಮಾಡಿದರು.