POLITICS:
ವಿಜಯಪುರ : ಸಿಂದಗಿ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಭರ್ಜರಿ ಜಯಗಳಿಸಿದ್ದಾರೆ. ಕಳೆದ ಬಾರಿ ಚುನಾವಣೆಯಲ್ಲಿ ಸುಮಾರು ಎಂಟು ಸಾವಿರ ಮತದಿಂದ ಸೋತಿದ್ದ ರಮೇಶ್ ಈ ಬಾರಿ ಭರ್ಜರಿ ಜಯ ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾರ್ಯಕರ್ತರಲ್ಲಿ ಸಂತಸ ತಂದಿದ್ದು. ವಿಜಯಪುರ ನಗರದ ಸೈನಿಕ ಶಾಲೆಯ ಮತ ಎಣಿಕೆ ಎದುರು ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ಮುಳುಗಿದ್ದಾರೆ.
ನೂರು ಮೀಟರೊಳಗೆ ಯಾವುದೇ ಸಂಭ್ರಮಾಚರಣೆಗೆ ಅವಕಾಶ ಇಲ್ಲ ಎಂದು ಜಿಲ್ಲಾಧಿಕಾರಿಗಳ ಆದೇಶವಿದ್ದರೂ ಬಿಜೆಪಿ ಕಾರ್ಯಕರ್ತರು ಚುನಾವಣೆ ಆಯೋಗದ ನಿಯಮವನ್ನು ಗಾಳಿಗೆ ತೂರಿ ಪಟಾಕಿ ಸಿಡಿಸಿ ಪರಸ್ಪರ ಗುಲಾಲ ಎರಚಿ ಸಂಭ್ರಮಿಸುತ್ತಿದ್ದಾರೆ.
ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರು ಅಂದಾಜು 31185 ಅಧಿಕ ಮತಗಳಿಂದ ಕಾಂಗ್ರೆಸ್ ಅಶೋಕ್ ಮನಗೂಳಿಯವರನ್ನು ಸೋಲಿಸಿದ್ದು, ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರು 93865ಮತ ಪಡೆದರೆ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮನಗೂಳಿ 62680 ಮತ ಪಡೆದಿದ್ದು, ಜೆಡಿಎಸ್ ಅಭ್ಯರ್ಥಿ ನಾಜಿಯಾ ಅಂಗಡಿ 4353 ಮತಗಳನ್ನು ಪಡೆದುಕೊಂಡಿದ್ದಾರೆ.
ಜೆಡಿಎಸ್ ನ ಎಂ ಸಿ ಮನಗೂಳಿ ನಿಧನದಿಂದಾಗಿ ತೆರವಾಗಿದ್ದ ಸಿಂದಗಿ ಮತಕ್ಷೇತ್ರಕ್ಕೆ ಉಪಚುನಾವಣೆ ನಡೆದಿದ್ದು. ಎಂ ಸಿ ಮನಗೂಳಿ ಪುತ್ರ ಅಶೋಕ್ ಮನಗೂಳಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡು ಚುನಾವಣೆಗೆ ಸ್ಪರ್ಧಿಸಿದ್ದರು. ಅನುಕಂಪದ ಅಲೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ ಎನ್ನುವ ಲೆಕ್ಕಾಚಾರ ತಲೆಕೆಳಗಾಗಿದೆ.
ಇನ್ನೂ ಚುನಾವಣಾ ಆಯೋಗದ ಅಧಿಕೃತ ಘೋಷಣೆ ಬಾಕಿಯಿದ್ದು ಅಭಿಮಾನಿಗಳು ಮತ್ತು ಬಿಜೆಪಿ ಕಾರ್ಯಕರ್ತರು ಸಿಹಿ ಹಂಚಿ , ಬಣ್ಣವನ್ನು ಎರಚುವ ಮೂಲಕ ಗೆಲುವಿನ ಸಂಭ್ರಮಾಚರಣೆಯಲ್ಲಿದ್ದಾರೆ.