POLITICS:
ಬೆಂಗಳೂರು: ವಿವಿಧ ಪಕ್ಷಗಳಿಂದ ಕಾಂಗ್ರೆಸ್ ಪಕ್ಷ ಸೇರಲು ಸುಮಾರು ಅರ್ಜಿಗಳು ನನ್ನ ಹಾಗೂ ಪಕ್ಷದ ಸಮಿತಿ ಮುಂದೆ ಇವೆ. ಈ ಅರ್ಜಿಗಳ ಬಗ್ಗೆ ನಾವು ಚರ್ಚೆ ಮಾಡುತ್ತಿದ್ದು, ಸ್ಥಳೀಯ ನಾಯಕರ ಒಮ್ಮತ ಇರುವ ಕಡೆ ಮೊದಲು ತೀರ್ಮಾನ ಮಾಡಿ ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದ್ದೇವೆ ಎಂದು ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಮೇಲ್ಮನೆ ಮಾಜಿ ಸದಸ್ಯ ಬೆಮಲ್ ಕಾಂತರಾಜು ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಕ್ಷಕ್ಕೆ ಸೇರಿಸಿಕೊಳ್ಳುವಾಗ ಆಯಾ ಜಿಲ್ಲಾ ಮಟ್ಟದ ಮುಖಂಡರು ಹಾಗೂ ಕಾರ್ಯಕರ್ತರ ಜತೆ ಚರ್ಚಿಸಿ ತೀರ್ಮಾನಿಸುತ್ತಿದ್ದೇವೆ. ಯಾರೇ ಕಾಂಗ್ರೆಸ್ ಸೇರಬೇಕಾದರೂ ಬೆಷರತ್ ಬರಬೇಕು. ಜತೆಗೆ ಪಕ್ಷದ ನಾಯಕತ್ವ ಹಾಗೂ ಸಿದ್ಧಾಂತ ಒಪ್ಪಬೇಕು ಎಂದರು.
ಜಿಲ್ಲಾ ಪಂಚಾಯ್ತಿ, ತಾಲೂಕು ಪಂಚಾಯ್ತಿ ಸದಸ್ಯರುಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಆಯಾ ಜಿಲ್ಲಾ ಕಾಂಗ್ರೆಸ್ ಸಮಿತಿಗೆ ಅಧಿಕಾರ ಕೊಟ್ಟಿದ್ದೇವೆ. ಸ್ಥಳೀಯ ಶಾಸಕರು ಹಾಗೂ ಮಾಜಿ ಶಾಸಕರಿಗೂ ಕೂಡ ಆಯಾ ಭಾಗದಲ್ಲಿ ಪಕ್ಷಕ್ಕೆ ಸೇರಿಸಿಕೊಳ್ಳುವ ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.
ಸದಸ್ಯತ್ವ ನೋಂದಣಿ
ಪಕ್ಷದ ಸದಸ್ಯತ್ವ ಅಭಿಯಾನ ಆರಂಭವಾಗಿದ್ದು, ಇಂದು ಹಾಗೂ ನಾಳೆ ದೆಹಲಿಯಿಂದ ತರಬೇತಿ ಸಭೆ ಇದೆ. ಆನ್ಲೈನ್ ಹಾಗೂ ಆಫ್ ಲೈನ್ ನಲ್ಲಿ ಸದಸ್ಯತ್ವ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. 12 ವರ್ಷಗಳ ನಂತರ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಶ್ರೀಮತಿ ಸೋನಿಯಾ ಗಾಂಧಿ ಅವರು ಈ ಅವಕಾಶ ಮಾಡಿಕೊಟ್ಟಿದ್ದು, ಎಲ್ಲರೂ ಈ ಅವಕಾಶ ಬಳಸಿಕೊಳ್ಳಬೇಕಿದೆ ಎಂದರು.
ಪಕ್ಷದ ಸದಸ್ಯತ್ವ ನೋಂದಣಿ ಕಾರ್ಯಕ್ರಮ ಬಹಳ ಮುಖ್ಯವಾಗಿದ್ದು, ಭವಿಷ್ಯದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕ, ವಿಧಾನಸಭೆ ಚುನಾವಣೆಯಲ್ಲಿ ಯಾರಿಗೆ ಟಿಕೆಟ್ ನೀಡಬೇಕು ಎಂಬ ವಿಚಾರವಾಗಿ ಪಕ್ಷದ ಸ್ಥಳೀಯ ಸದಸ್ಯರ ಅಭಿಪ್ರಾಯ ಪಡೆಯಲು ಈ ನೋಂದಣಿಯ ದತ್ತಾಂಶಗಳನ್ನು ಬಳಸಿಕೊಳ್ಳಲಾಗುವುದು ಎಂದು ತಿಳಿಸಿದರು.
ಜೆಡಿಎಸ್ ನಿಂದ ಕಾಂಗ್ರೆಸ್ ಗೆ
ತುಮಕೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಜವಾಬ್ದಾರಿಯುತವಾಗಿ ಕೆಲಸ ಮಾಡಿ, ಮುಂದಿನ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ತರಲು ನಿಮ್ಮೆಲ್ಲರ ಜತೆ ನಾನು ಶ್ರಮಿಸುತ್ತೇನೆ ಎಂದು ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರ್ಪಡೆಯಾದ ಬೆಮಲ್ ಕಾಂತರಾಜು ಇದೇ ವೇಳೆ ತಿಳಿಸಿದರು.